ದೇವೇಗೌಡರ ಮುಂದೆ ಗಳಗಳನೆ ಅತ್ತ ನಿಖಿಲ್ ಕುಮಾರಸ್ವಾಮಿ!
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ನಾಮಪತ್ರ ಭರಾಟೆ ಜೋರಾಗಿದೆ. ಅದರಂತೆ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರಂ ಸ್ವೀಕರಿಸುವಾಗ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ತಂದೆ ಹೆಚ್.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಚೆನ್ನಮ್ಮರ ಆಶೀರ್ವಾದ ಪಡೆದರು. ನಿಖಿಲ್ ಕುಮಾರಸ್ವಾಮಿ ಬಿ ಫಾರಂ ಪಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ಪತ್ನಿ ರೇವತಿ ಭಾಗಿಯಾಗಿದ್ದರು.
ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಬೆಳಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆ ತೆರಳಿ ಮಧ್ಯಾಹ್ನ 12:30ಕ್ಕೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.