ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಯು.ಟಿ.ಖಾದರ್ ಅವರನ್ನು ಅಭಿನಂದಿಸಿ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ! » Dynamic Leader
October 4, 2024
ರಾಜಕೀಯ

ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಯು.ಟಿ.ಖಾದರ್ ಅವರನ್ನು ಅಭಿನಂದಿಸಿ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ಅಧಿವೇಶನದಲ್ಲಿ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಯು.ಟಿ.ಖಾದರ್ ಅವರನ್ನು ಅಭಿನಂದಿಸಿ ಮಾತನಾಡಿದರು.

“ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ. ಸದನದ ಘನತೆ, ಗಾಂಭೀರ್ಯ, ಗೌರವವನ್ನು ಸ್ಪೀಕರ್ ಎತ್ತಿಹಿಡಿಯಬೇಕು. ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು ಆಶಿಸುತ್ತೇನೆ.

ಖಾದರ್ ಅವರು ಸಭಾದ್ಯಕ್ಷರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಂಬಿಕೆ, ವಿಶ್ವಾಸವಿದೆ. ಅವರು ಬಹಳ ತಾಳ್ಮೆ ಇರುವ ವ್ಯಕ್ತಿ. ಅದು ಈ ಹುದ್ದೆಗೆ ಅಗತ್ಯವಾದ ಗುಣ. ಸದನದಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಚರ್ಚೆಗಳಾಗಲಿ. ಹೊಸದಾಗಿ ಆರಿಸಿ ಬಂದ ಸದಸ್ಯರಿಗೆ ಅಭಿನಂದನೆಗಳು. ಸರ್ಕಾರವಾಗಿ ತಮಗೆ ನಾವು ಎಲ್ಲ ರೀತಿಯ ಸಹಕಾರವನ್ನು ನೀಡುತ್ತೇವೆ.

ರಾಜಕಾರಣದ ಕುಟುಂಬದಿಂದ ಬಂದಿರುವ ಯು.ಟಿ.ಖಾದರ್ ಅವರು ತಮ್ಮ ತಂದೆಯ ನಿಧನದ ನಂತರ ಉಳ್ಳಾಲ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅತ್ಯಂತ ಉತ್ಸಾಹಿ, ಸಕ್ರಿಯ ರಾಜಕಾರಣಿಯಾದ ಖಾದರ್ ಅವರು ಶಾಸಕರಾಗಿ ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ್ದು, 2018ರಲ್ಲಿ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ “ಸದನವೀರ” ಪ್ರಶಸ್ತಿಯೂ ದೊರೆತಿತ್ತು.

ಯು.ಟಿ.ಖಾದರ್ ಅವರು ಮಾದರಿ ಶಾಕಸರಾಗಿ ಕೆಲಸ ಮಾಡಿದ್ದು, ವಿರೋಧ ಪಕ್ಷದಲ್ಲಿದ್ದ ಸಂದರ್ಭದಲ್ಲಿ ವಿರೋಧಪಕ್ಷದ ಉಪನಾಯಕರಾಗಿ ಪರಿಣಾಮಕಾರಿಯಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಜಾತ್ಯಾತೀತ ಮನೋಭಾವ ಉಳ್ಳವರು ಕೂಡ.

ಸಭಾಧ್ಯಕ್ಷರಾದವರು ಪಕ್ಷಾತೀತವಾಗಿ ಕೆಲಸ ಮಾಡಬೇಕೆಂದು ಎಲ್ಲ ಸದಸ್ಯರೂ ಬಯಸುತ್ತಾರೆ. ವಿಧಾನಸಭೆಯಲ್ಲಿ ಈ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಇತ್ತೀಚಿನ ದಿನಗಳಲ್ಲಿ ವಿಧಾನಸಭೆಯ ಗುಣಮಟ್ಟ ಕಡಿಮೆಯಾಗುತ್ತಿದೆ ಎಂಬ ಭಾವನೆ ಅನೇಕರಲ್ಲಿದೆ. ಆ ಭಾವನೆ ಹೋಗಲಾಡಿಸುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ. “ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ”. ಇಲ್ಲಿ ಏಳು ಕೊಟಿ ಕನ್ನಡಿಗರ ಸಮಸ್ಯೆಗಳನ್ನು ಚರ್ಚೆ ಮಾಡಬೇಕು.

ಸದನದ ಅಧ್ಯಕ್ಷರಿಗೆ ಪ್ರಜಾಪ್ರಭುತ್ವದಲ್ಲಿ ಮಹತ್ವದ ಸ್ಥಾನವಿದೆ. ಸದನದ ಚರ್ಚೆಯಲ್ಲಿ ಅನೇಕ ವಿಚಾರಗಳು ಬರುತ್ತವೆ. ಚರ್ಚೆಯಲ್ಲಿ ಭಾಗವಹಿಸುವಾಗ ಪದಬಳಕೆಯಲ್ಲಿ ಬಹಳ ಎಚ್ಚರಿಕೆ ವಹಿಸಬೇಕು. ಅಸಂವಿಧಾನಾತ್ಮಕ ಪದಬಳಕೆಗೆ ಅವಕಾಶವಿರಬಾರದು. ರಚನಾತ್ಮಾಕವಾದ ಸಲಹೆಗಳನ್ನು ನೀಡಲು ಎಲ್ಲರಿಗೂ ಅವಕಾಶ ಹಾಗೂ ಹಕ್ಕುಗಳಿವೆ.

ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕ. ವಿಧಾನಸಭೆಗೆ ಬಂದ ಮೇಲೆ ರಾಜ್ಯದ ಅಭಿವೃದ್ಧಿ, ಜನರ ರಕ್ಷಣೆ, ಕಾನೂನು ಸುವ್ಯವಸ್ಥೆ ಇರಬೇಕು. ಕಾನೂನು ಸುವ್ಯವಸ್ಥೆ ಇಲ್ಲದಿದ್ದರೆ ಬಂಡವಾಳ ಹೂಡಿಕೆಯಾಗುವುದಿಲ್ಲ. ಬಂಡವಾಳ ಹೂಡಿಕೆಯಾಗದಿದ್ದರೆ, ಉದ್ಯೋಗ ಸೃಷ್ಟಿಯಾಗುವುದಿಲ್ಲ. ಉದ್ಯೋಗ ಸೃಷ್ಟಿಯಾಗದಿದ್ದರೆ ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ. ರಾಜ್ಯದ ಅಭಿವೃದ್ಧಿ, ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಆದ್ದರಿಂದ ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕವಾಗಿದೆ” ಎಂದು ಹೇಳಿದರು.

Related Posts