ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡುತ್ತಿರುವ ಪ್ರಧಾನಿ: ರಾಹುಲ್ ಆರೋಪ
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸ್ ಮಾಡಲು ಪ್ರಧಾನಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನವನ್ನು ಖಂಡಿಸಿ ದೆಹಲಿಯಲ್ಲಿ ಇಂದು ನಡೆದ “ಇಂಡಿಯಾ” ಮೈತ್ರಿಕೂಟದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಅವರು ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ದೊಡ್ಡ ಪಕ್ಷವಾದ ಕಾಂಗ್ರೆಸ್ ನ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದು ಯಾವ ರೀತಿಯ ಚುನಾವಣೆ?
ಬಿಜೆಪಿಯಿಂದ ನನ್ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ವಿರೋಧ ಪಕ್ಷದ ನಾಯಕರನ್ನು ಬಂಧಿಸಿ ಜೈಲಿಗೆ ಹಾಕಲಾಗುತ್ತದೆ. ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯ ಮೂಲಕ ದೇಶವನ್ನು ನಡೆಸಲು ಪ್ರಯತ್ನಿಸುತ್ತಿದ್ದಾರೆ. ವಿದ್ಯುನ್ಮಾನ ಮತಯಂತ್ರ, ಮ್ಯಾಚ್ ಫಿಕ್ಸಿಂಗ್, ಸಾಮಾಜಿಕ ಮಾಧ್ಯಮ ಮತ್ತು ಮಾಧ್ಯಮಗಳ ಒತ್ತಡವಿಲ್ಲದೆ ಬಿಜೆಪಿ 180 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ.
ಸಂವಿಧಾನವು ಜನರ ಧ್ವನಿಯಾಗಿದೆ. ಇದು ಕೊನೆಗೊಂಡರೆ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದರು ಹೇಳುತ್ತಾರೆ. ಇದು ಅವರ ನೀತಿಯನ್ನು ಪರೀಕ್ಷಿಸುವ ಪ್ರಯತ್ನವಾಗಿದೆ.
ನೀವು ಪೂರ್ಣ ಪ್ರಯತ್ನದಿಂದ ಅವರ ವಿರುದ್ಧ ಮತ ಚಲಾಯಿಸದಿದ್ದರೆ, ಅವರ ಮ್ಯಾಚ್ ಫಿಕ್ಸಿಂಗ್ ಗೆಲ್ಲುತ್ತದೆ. ಅವರು ಗೆದ್ದರೆ ಸಂವಿಧಾನವನ್ನು ನಾಶಪಡಿಸುತ್ತಾರೆ. ಈ ಚುನಾವಣೆ ಸಾಮಾನ್ಯ ಚುನಾವಣೆಯಲ್ಲ. ದೇಶ ಮತ್ತು ಸಂವಿಧಾನವನ್ನು ರಕ್ಷಿಸುವ ಚುನಾವಣೆ” ಎಂದು ರಾಹುಲ್ ಹೇಳಿದರು.
ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ರಾಜ್ಯಗಳಲ್ಲಿ ಸರ್ಕಾರ ರಚಿಸಲು ಮತ್ತು ವಿರೋಧ ಪಕ್ಷದ ನಾಯಕರನ್ನು ಹೆದರಿಸಲು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ಬೇಕೋ ಅಥವಾ ಸರ್ವಾಧಿಕಾರ ಬೇಕೋ ಎಂಬುದನ್ನು ಜನರೇ ನಿರ್ಧರಿಸಬೇಕು. ಸರ್ವಾಧಿಕಾರವನ್ನು ಬೆಂಬಲಿಸುವವರನ್ನು ದೇಶದಿಂದ ಹೊರಹಾಕಬೇಕು. ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿಷ ಇದ್ದಂತೆ; ವಿಷ ತಿಂದರೆ ಸಾವು ಸಂಭವಿಸುತ್ತದೆ” ಎಂದು ಹೇಳಿದರು.