ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಅಚ್ಛೇ ದಿನ್ Archives » Dynamic Leader
September 17, 2024
Home Posts tagged ಅಚ್ಛೇ ದಿನ್
ರಾಜ್ಯ

ಕೊಡಗು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಬೃಹತ್ ಜನ ಸಾಗರವನ್ನು ಉದ್ದೇಶಿಸಿ ಮಾತನಾಡಿದರು.

“ನಾವು ತಂದ ಗ್ಯಾರಂಟಿಗಳನ್ನು ಮೋದಿಯವರು ಆಡಿಕೊಂಡರು. ಜಾರಿಗೆ ತಂದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದರು. ಈಗ ಅದೇ ಮೋದಿಯವರೇ ನಮ್ಮ ಗ್ಯಾರಂಟಿ ಕಾರ್ಯಕ್ರಮಗಳನ್ನು ಕಾಪಿ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಆರ್ಥಿಕವಾಗಿ ಇನ್ನೂ ಸದೃಢವಾಗಿದೆ” ಎಂದು ಹೇಳಿ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು.

“ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ದೇಶದ ಸಾಲ 173 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 10 ವರ್ಷಗಳ ಮೋದಿ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುವ ನೈತಿಕ ಹಕ್ಕು ಬಿಜೆಪಿಗೆ ಇಲ್ಲ. ಏಕೆಂದರೆ ದೇಶದಲ್ಲಿರುವ ಎಲ್ಲಾ ಪ್ರತಿಷ್ಠಿತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಅಣೆಕಟ್ಟುಗಳು ಆಗಿದ್ದು ಬಿಜೆಪಿಯೇತರ ಕಾಂಗ್ರೆಸ್ ಮತ್ತು ಇತರೆ ಸರ್ಕಾರಗಳ ಅವಧಿಯಲ್ಲಿ ನಿರ್ಮಾಣವಾದವು. ನಿಮ್ಮ ಅವಧಿಯಲ್ಲಿ ಏನು ಮಾಡಿದ್ದೀರಿ ಮೋದಿ ಅವರೇ?” ಎಂದು ಕಿಡಿಕಾರಿದರು.

“ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಲ್ಲಾ ಮೋದಿಯವರೇ. ಮಾಡಿದ್ರಾ? ಎಲ್ಲಿ 20 ಕೋಟಿ ಉದ್ಯೋಗ? ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಗೊಬ್ಬರ, ಕಾಳು ಬೇಳೆ, ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತೆ ಅಂದ್ರಲ್ಲಾ, ಕಡಿಮೆ ಮಾಡಿದ್ರಾ ಮೋದಿಯವರೇ?” ಎಂದು ಪ್ರಧಾನಿಯನ್ನು ಪ್ರಶ್ನಿಸಿದರು.

“ದೇಶದ ಸಾಲ ತೀರಿಸಿ ಬಿಡ್ತೀನಿ ಅಂದ್ರಲ್ಲಾ ತೀರಿದೆಯಾ? ನೀವು ಬರುವ ಮೊದಲು ದೇಶದ ಸಾಲ 53 ಲಕ್ಷ ಕೋಟಿ ಸಾಲ ಇತ್ತು. ನಿಮ್ಮ ಹತ್ತು ವರ್ಷಗಳಲ್ಲಿ ದೇಶದ ಸಾಲ 173 ಲಕ್ಷ ಕೋಟಿ ಆಗಿದೆ. ನಿಮ್ಮೊಬ್ಬರ ಅವಧಿಯಲ್ಲಿ 120 ಲಕ್ಷ ಕೋಟಿ ಮಾಡಿದ್ದೀರಿ. ಇದೆನಾ ನಿಮ್ಮ ಸಾಧನೆ? ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಲ್ಲಾದರೂ ಜಾರಿಯಾಗಿದೆಯಾ? ಸಣ್ಣ ಉದಾಹರಣೆ ಇದ್ದರೆ ಹೇಳಿ. ಅಚ್ಛೇ ದಿನ್ ಆಯೆಗಾ ಎಂದಿರಿ? ಕಹಾಂ ಹೈ ಅಚ್ಛೆ ದಿನ್ ಮೋದೀಜಿ?” ಎಂದು ವ್ಯಂಗ್ಯವಾಡಿದರು.

“ಮಂಡಲ್ ಕಮಿಷನ್ ವರದಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ್ದು ಪ್ರಧಾನಿಗಳಾಗಿದ್ದ ವಿ.ಪಿ.ಸಿಂಗ್ ಮತ್ತು ನರಸಿಂಹರಾಯರು. ನಿಮ್ಮ‌ಸಾಧನೆ ಏನು? ಈ ಬಗ್ಗೆ ಯಾವ ಕಾರ್ಯಕ್ರಮಗಳನ್ನು ನಿಮ್ಮ ಅವಧಿಯಲ್ಲಿ ಕೊಟ್ಟಿದ್ದೀರಿ?” ಎಂದು ಮೋದಿಯನ್ನು ಪ್ರಶ್ನಿಸಿದರು.

“ಬಿಜೆಪಿಯವರು ತಮ್ಮ ಪ್ರಣಾಳಿಕೆಗಳಲ್ಲಿ ಕೊಟ್ಟ ಆಶ್ವಾಸನೆಗಳಲ್ಲಿ ಶೇ.10 ರಷ್ಟನ್ನೂ ಜಾರಿ ಮಾಡಲೇ ಇಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡು ಜನರ ಋಣ ತೀರಿಸಿದ್ದೇವೆ. ಇದನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು. ನಾಡಿನ ಯುವಕರಿಗೆ ಉದ್ಯೋಗ ನೀಡದೆ, ಕೇವಲ ಯುವ ಸಮೂಹವನ್ನು, ವಿದ್ಯಾರ್ಥಿ ಸಮೂಹವನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿನ ಜೊತೆ ಚೆಲ್ಲಾಟ ಆಡಿದ್ದಾರೆ. ಈ ಕಾರಣಕ್ಕಾಗಿ ಜನತೆ ಬಿಜೆಪಿಯನ್ನು ತಿರಸ್ಕರಿಸಬೇಕು” ಎಂದು ಜನರಲ್ಲಿ ಮನವಿ ಮಾಡಿದರು.